ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ: ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸಲು ಶ್ರಮಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ
ರಾಯಚೂರು ಏ.28- ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನ ಮಾಡುವ ಮೂಲಕ ಸರ್ಕಾರವು ರೈತರ ಅಭಿವೃದ್ಧಿಗಾಗಿ ರೂಪಿಸಿದ ಯೋಜನೆಗಳ ಲಾಭವನ್ನು ಅವರ ಮನೆ ಬಾಗಿಲಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಜಿ.ಕುಮಾರ ನಾಯಕ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ತಪ್ತಿಕರವಾಗಿದ್ದು, ಅಧಿಕಾರಿಗಳು ಇನ್ನೂ ಹೆಚ್ಚಿನ ವೇಗದಲ್ಲಿ ಕೆಲಸ ಮಾಡಿ ತಮ್ಮ ಇಲಾಖೆಗಳಿಗೆ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ಸಂಪೂರ್ಣವಾಗಿ ಸಾಧಿಸಬೇಕೆಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ರೈತರಿಗೆ ಸಮಯಕ್ಕೆ ಸರಿಯಾಗಿ ರಸಗೊಬ್ಬರ ಹಾಗೂ ಇತರೆ ಬೇಕಾಗುವ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಕೆರೆಗಳಿಗೆ ಶೇ. 78ರಷ್ಟು ನೀರನ್ನು ತುಂಬುವ ಕಾರ್ಯ ಪೂರ್ಣಗೊಂಡಿದ್ದು, ರಾಯಚೂರಿನಲ್ಲಿ 20, ಮಾನ್ವಿಯಲ್ಲಿ 76, ದೇವದುರ್ಗದಲ್ಲಿ 11, ಲಿಂಗಸೂಗೂರು 3, ಸಿಂಧನೂರಿನಲ್ಲಿ 163 ಸೇರಿದಂತೆ ಒಟ್ಟು 273 ಕೆರೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗಿದೆ. ಬೇಸಿಗೆಯಲ್ಲಿ ಯಾವುದೇ ನೀರಿನ ಕೊರತೆಯಾಗುವುದಿಲ್ಲ ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರ್ ಮೇನಕಾ ಅವರು ಸಭೆಗೆ ಮಾಹಿತಿ ನೀಡಿದರು. ರಾಯಚೂರಿನ ನಗರಸಭೆಯ ಒಟ್ಟು 35 ವಾರ್ಡ್ಗಳು ಹಾಗೂ ಜಿಲ್ಲೆಯ ಪಟ್ಟಣ ಪಂಚಾಯತ್, ಪುರಸಭೆಗಳ 260ವಾರ್ಡ್ಗಳಿಗೆ ಕಡ್ಡಾಯವಾಗಿ ದಿನಾಲು ಕುಡಿಯುವ ನೀರು ಪೂರೈಕೆ ಮಾಡಬೇಕು. ಅಲ್ಲದೆ ರಾಯಚೂರಿನ ನಗರಸಭೆಯು ಕರವಸೂಲಿಯಲ್ಲಿ ಶೇಕಡ 90ರಷ್ಟು ಮಾಡಲಾಗಿದ್ದು, ಕೂಡಲೇ ಮುಂದಿನ ದಿನಗಳಲ್ಲಿ ಶೇಕಡ 100ರಷ್ಟು ಕರ ವಸೂಲಿ ಮಾಡುವಂತೆ ರಾಯಚೂರಿನ ನಗರಸಭೆಯ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು.
ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲು ಈಗಾಗಲೇ ಜಿಲ್ಲೆಯ ಯರಗೇರಾ ನಾಡ ಕಚೇರಿ ಆವರಣ, ಗುಂಡಾ ಪ್ರೌಢ ಶಾಲೆ ಆವರಣ, ಕಲಮಂಗಿ ಪ್ರೌಢ ಶಾಲೆ ಆವರಣ, ಮುದುಗಲ್ ಎಪಿಎಂಸಿ ಆವರಣ, ಗುಡಗುಂಟಾ ರೈತರ ಯಾತ್ರಿ ಗೃಹದ ಆವರಣ, ಹಾಗೂ ದೇವದುರ್ಗ ತಾಲೂಕಿನ ಅರಕೇರಿ ಎಪಿಎಂಸಿ ಆವರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 6ಮೇವು ಬ್ಯಾಂಕ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಶಿವಣ್ಣ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರಿಗೆ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕಿನ ಜಾನುವಾರುಗಳಿಗೆ ಕಾಲಕಾಲಕ್ಕೆ ಕಡ್ಡಾಯವಾಗಿ ಲಸಿಕೆ ನೀಡಬೇಕು. ಜಿಲ್ಲೆಯ ಪಶು ಆಸ್ಪತ್ರೆಗಳಿಗೆ ಸ್ವಂತ ಕಟ್ಟಡ ಹಾಗೂ ವೈದ್ಯರು ಕಡ್ಡಾಯವಾಗಿ ಇರಬೇಕು ಈ ಕುರಿತು ಹೆಚ್ಚಿನ ಗಮನ ಹರಿಸಬೇಕು. ಅಲ್ಲದೆ ಮುಂದಿನ 29ವಾರಗಳಷ್ಟು ಮೇವಿನ ಲಭ್ಯತೆಯನ್ನು ನೋಡಿಕೊಳ್ಳಬೇಕೆಂದು ಪಶು ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಕಟ್ಟಡ ಇರಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ವೇಳೆ ಜಿ.ಪಂ ಸಿಇಒ ಅವರು ಮಾತನಾಡಿ, ಸರ್ಕಾರಿ ಶಾಲೆಗಳ ಮೇಲ್ಛಾವಣಿ ರಿಪೇರಿ ಹಾಗೂ ಇತರೆ ಸಣ್ಣಪುಟ್ಟ ಸಮಸ್ಯೆ ನಿವಾರಣೆಗೆ ಅನುದಾನ ಕೊರತೆ ಇದ್ದು, ಮುಂದಿನ ದಿನಗಳಲ್ಲಿ ಬೇರೆ ಯೋಜನೆಗಳ ಅನುದಾನವನ್ನು ಬಳಸಿಕೊಂಡು ರಿಪೇರಿ ಮಾಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಈ ಕುರಿತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಹಾಸ್ಟೆಲ್ಗಳಲ್ಲಿ ಹೊರಗುತ್ತಿಗೆ ಆಧಾರ ಮೇಲೆ ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳಲು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ ಜಹಾರ್ ಖಾನಂ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಜಿಲ್ಲಾ ಪಂಚಾಯತ್ ಯೋಜನೆ ನಿರ್ದೇಶಕ ಮುಡೋಳಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ರಾಮಕೃಷ್ಣ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ವಿಜಯ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೇಖ್ ಅಲಿ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಬು ಬಳಗಾನೂರ, ದೇವದುರ್ಗ ತಹಸೀಲ್ದಾರ್ ಶ್ರೀನಿವಾಸ ಚಾಪೆಲ್, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮರಡ್ಡಿ, ರಾಯಚೂರು ನಗರಸಭೆಯ ಪೌರಾಯುಕ್ತ ಕೆ.ಮುನಿಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.
Comments
Post a Comment