ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಮಹರ್ಷಿ ವಾಲ್ಮೀಕಿ ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ- ಬಸನಗೌಡ ದದ್ದಲ್
ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ:
ಮಹರ್ಷಿ ವಾಲ್ಮೀಕಿ ರವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ- ಬಸನಗೌಡ ದದ್ದಲ್
ರಾಯಚೂರು,ಅ.28 ಮಹರ್ಷಿ ವಾಲ್ಮೀಕಿ ಅವರು ಕೇವಲ ಒಂದು ಸಮಾಜಕ್ಕೆ ಸೀಮಿತರಾದವರಲ್ಲ ಅವರು ಮನುಕುಲಕ್ಕೆ ಆಸ್ತಿಯಿದ್ದಂತೆ ಆದ್ದರಿಂದ ಅಂತಹ ಮಹಾನ್ ವ್ಯಕ್ತಿಯ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.
ಅವರಿಂದು ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರು ಸಮಾಜಕ್ಕೆ ನೀಡಿದ ಉತ್ತಮ ಜೀವನ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಾಲ್ಮೀಕಿ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಆದ್ದರಿಂದ ವಾಲ್ಮೀಕಿ ಮಹರ್ಷಿಗಳು ನೀಡಿದ ಸಿದ್ದಾಂತಗಳನ್ನು ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.
ಸಮಾಜ ಅಭಿವೃದ್ಧಿ ಹೊಂದಲು ಸಮಾಜದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕು ಮತ್ತು ಉತ್ತಮ ಶಿಕ್ಷಣವನ್ನು ನೀಡವುದು ಪೋಷಕರು ಹಾಗೂ ಜನಪ್ರತಿನಿಧಿಗಳ ಮುಖ್ಯ ಕರ್ತವ್ಯವಾಗಿದೆ. ಹಾಗೂ ಮುಂದಿನ ದಿನಗಳಲ್ಲಿ ವಾಲ್ಮೀಕಿ ಭವನವನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಮಸ್ಕಿಯ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮಹಾಂತಗೌಡ ಪಟೀಲ್ ಅವರು ಉಪನ್ಯಾಸ ನೀಡಿ, ಆದಿಕವಿ, ಮಹಾಋಷಿ ಎಂಬ ಬಿರುದುಗಳಿಂದ ಹೆಸರುವಾಸಿಯಾದ ಮಹರ್ಷಿ ವಾಲ್ಮೀಕಿ ಅವರು ರಾಮಾಯಣವನ್ನು ರಚಿಸುವ ಮೂಲಕ ಕೆಳ ಸಮುದಾಯಗಳು ಸಂಸ್ಕೃತವನ್ನು ಕಲಿಯುವುದು ಅಪರಾಧ ಎಂದು ಹೇಳಲಾಗುತ್ತಿದ್ದ ಮೌಡ್ಯತೆಯನ್ನು ತೊಲಗಿಸಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಾಲ್ಮೀಕಿ ಸಮುದಾಯದ ಸಾಧಕರಿಗೆ ಮತ್ತು ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕ ಪದವಿಯ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಶೀರ ಆಹ್ಮದ್,ಜಿ.ಪಂ ಸಿಇಓ ರಾಹುಲ್ ತುಕಾರಾಮ ಪಾಂಡ್ವೆ,ಎಸ್ಪಿ ನಿಖಿಲ್ .ಬಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ಸಹಾಯಕಆಯುಕ್ತೆ ಮಹಿಬೂಬಿ, ತಹಶೀಲ್ದಾರ ಸುರೇಶ ವರ್ಮಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ವೈ ವಾಲ್ಮೀಕಿ , ಸಮಾಜದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಭವ್ಯ ಮೆರವಣಿಗೆ: ಬೆಳಿಗ್ಗೆ ನಗರದ ಪ್ರಮುಖ ಬೀದಿಯಲ್ಲಿ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಪುತ್ಥಳಿಗೆ ಮಾಲಾರ್ಪಣೆ : ಬೆಳಿಗ್ಗೆ ಗಣ್ಯರು ಶ್ರೀ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
Comments
Post a Comment