ನಗರ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ : ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಕ್ಕೆ ಸೂಚನೆ
ಜಯಧ್ವಜ ನ್ಯೂಸ್ ,ರಾಯಚೂರು, ಮಾ.29- ನಗರದ ಹೃದಯ ಭಾಗದಲ್ಲಿರುವ ನಗರ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳಿಗೆ ಸಾಹಿತ್ಯಿಕ ಪುಸ್ತಕಗಳ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಅನುಕೂಲವಾಗುವಂತಹ ಪುಸ್ತಕಗಳನ್ನು ಗ್ರಂಥಾಲಯದಲ್ಲಿಡಬೇಕು. ಗ್ರಂಥಾಲಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಇತರೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ಗ್ರಂಥಾಲಯದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸದ್ಯ ಗ್ರಂಥಾಲಯದ ಒಳಗಡೆ ಮತ್ತು ಹೊರಗಡೆ ಅತ್ಯುತ್ತಮ ವಾತಾವರಣವಿದೆ. ಇದು ಹೀಗೆಯೇ ಮುಂದುವರೆಯಬೇಕು.
ವಿದ್ಯಾರ್ಥಿಗಳಿಗೆ ತಕ್ಷಣ ಪುಸ್ತಕಗಳು ಲಭ್ಯವಾಗುವಂತೆ ವಿಷಯವಾರು ಪುಸ್ತಕಗಳನ್ನು ಅಚ್ಚುಕಟ್ಟಾಗಿ ಜೋಡಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು, ಗ್ರಂಥಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಗ್ರಂಥಾಲಯಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಓದಲು ಬರುತ್ತಾರೆ. ಹೀಗಾಗಿ ಗ್ರಂಥಾಲಯದ ಮೇಲಗಡೆ ಇನ್ನಷ್ಟು ಹೊಸದಾದ ಸಿಂಟ್ಯಾಕ್ಸ ಕೂಡಿಸಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾದ ಶೌಚಾಲಯಗಳ ನಿರ್ಮಾಣದ ವ್ಯವಸ್ಥೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
Comments
Post a Comment