ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಿಂದ ನಗರ ಸಂಚಾರ:         ಕಾಮಗಾರಿಗಳ ಪರಿಶೀಲನೆ


ಜಯ ಧ್ವಜ ನ್ಯೂಸ್ ,ರಾಯಚೂರು ಫೆ. 21 -ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮಹೋಪಾತ್ರ ಅವರು ಇಂದು  ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಪ್ರಗತಿಯಲ್ಲಿರುವ ಮತ್ತು ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗೊಳಿಸುವುದು ಹಾಗೂ ಭವಿಷ್ಯದ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.


ಆಯುಕ್ತರು ಮೊದಲು ಮಾವಿನಕೆರೆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಸಾರ್ವಜನಿಕ ಸ್ಥಳಗಳಲ್ಲಿನ ಅತಿಕ್ರಮಣಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದರ ಜೊತೆಗೆ ಮಾವಿನಕೆರೆಯ ಉದ್ಯಾನವನ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಹೈಟೆಕ್ ಸಾರ್ವಜನಿಕ ಶೌಚಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಈ ಸೌಲಭ್ಯವನ್ನು ತ್ವರಿತವಾಗಿ ಪ್ರಾರಂಭಿಸುವ ಮೂಲಕ ಸ್ಥಳೀಯ ನಿವಾಸಿಗಳಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಂತರ ಸ್ವಚ್ಛತಾ ಕಾರ್ಮಿಕರಿಗಾಗಿ ಮೀಸಲಿಟ್ಟಿರುವ ಸ್ಮಶಾನ ಸ್ಥಳದ ಅಭಿವೃದ್ಧಿ ಕಾಮಗಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿ, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂತಿಮವಾಗಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ಪ್ರಸ್ತಾಪಿಸಲಾದ ಅಭಿವೃದ್ಧಿ ಕಾಮಗಾರಿಗಳ ವ್ಯಾಪ್ತಿಯಲ್ಲಿ ಹೊಸ ರಸ್ತೆಗಳ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ಸ್ಥಳ ಪರಿಶೀಲನೆ ನಡೆಸಿದರು. ಈ ಯೋಜನೆಯಡಿ ಕೈಗೊಳ್ಳಬೇಕಿರುವ ಕಾಮಗಾರಿಗಳಿಗಾಗಿ ಸಮಗ್ರ ಯೋಜನೆಯನ್ನು ರೂಪಿಸಿ ಬೇಗನೇ ಕಾರ್ಯಾರಂಭ ಮಾಡುವಂತೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಅಲ್ಲದೆ ನಗರದ ಸಮಗ್ರ ಅಭಿವೃದ್ಧಿ, ಸೌಂದರ್ಯೀಕರಣ ಮತ್ತು ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಭರತ್ ಕುಮಾರ್, ಕಂದಾಯ ವಿಭಾಗದ ಉಪ ಆಯುಕ್ತರಾದ ಬಿ.ಶರಣಪ್ಪ, ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ವಿವಿಧ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.
 

Comments

Popular posts from this blog