ಕುರ್ವಕಲಾ ಗ್ರಾಮಕ್ಕೆ ಗ್ರಾಮೀಣ  ಶಾಸಕ ಬಸನಗೌಡ ದದ್ದಲ್ ಭೇಟಿ: ಸೇತುವೆ ಕಾಮಗಾರಿ ಪರಿಶೀಲನೆ


ಜಯ ಧ್ವಜ ನ್ಯೂಸ್ ರಾಯಚೂರು, ಮಾ.20- ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಇಂದು ರಾಯಚೂರು ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ರಾಯಚೂರು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ನೇತೃತ್ವದಲ್ಲಿ ಕುರ್ವಕಲಾ ಗ್ರಾಮಕ್ಕೆ ಭೇಟಿ ನೀಡಿ, ಸೇತುವೆ ಕಾಮಗಾರಿಯ ವೀಕ್ಷಣೆ ನಡೆಸಿದರು.


ಭೇಟಿ ಸಂದರ್ಭದಲ್ಲಿ ಶಾಸಕರು, ದೇವಸ್ಥಾನ ಸುತ್ತಲು ಸಂಚರಿಸಿ ವೀಕ್ಷಣೆ ನಡೆಸಿ, ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ಕಲ್ಯಾಣ ಮಂಟಪ ಹಾಗೂ ಹಲವಾರು ಅಭಿವೃದ್ಧಿ ಕಾಮಗಾರಿಗಳ ನೀಲಿ ನಕ್ಷೆ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು ಸೇರಿದಂತೆ ಸುತ್ತಲಿನ ಜಿಲ್ಲೆಗಳ ಮತ್ತು ಬೇರೆ ಬೇರೆ ರಾಜ್ಯಗಳ ಬಹಳಷ್ಟು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಹಾಗಾಗಿ ಗ್ರಾಮ ಸಂಪರ್ಕದ ಎಲ್ಲ ರಸ್ತೆಗಳು ಅಚ್ಚುಕಟ್ಟಾಗಿ ಇರಬೇಕು. ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.

ದೇವಸ್ಥಾನದ ಅಭಿವೃದ್ಧಿಯ ಜೊತೆಗೆ ಇಲ್ಲಿಗೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಲಭ್ಯ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂಬುದನ್ನು ಅರಿತು ಅಧಿಕಾರಿಗಳು ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಸರಬರಾಜು, ಸಮುದಾಯ ಭವನ ನಿರ್ಮಾಣ, ಕಲ್ಯಾಣ ಮಂಟಪ ನಿರ್ಮಾಣ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾಮಗಾರಿಗಳ ನೀಲಿನಕ್ಷೆಯನ್ನು ಕೂಡಲೇ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ವೆಂಕಟೇಶ ಗಲಗ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಘವೇಂದ್ರ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇದೆ ವೇಳೆ ಶಾಸಕರು ದತ್ತಾತ್ರೇಯ ದೇವರ ದರ್ಶನ ಆಶೀರ್ವಾದ ಪಡೆದರು.

Comments

Popular posts from this blog