ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ 21ನೇ ಸ್ಥಾನಕ್ಕೆ ಜಿಗಿತ : ಬಿ.ವಿ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಖದೇವ್ ಗೆ 625 ಕ್ಕೆ 625 ಅಂಕ: ಸಚಿವ ಬೋಸರಾಜು ಶ್ಲಾಘನೆ
ಜಯ ಧ್ವಜ ನ್ಯೂಸ್ ,ರಾಯಚೂರು, ಏ. 23- ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಯಚೂರು ಜಿಲ್ಲೆಯು ಅತ್ಯುತ್ತಮ ಸಾಧನೆ ತೋರಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲೇ ಪ್ರಥಮ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಕಳೆದ ವರ್ಷ 30ನೇ ಸ್ಥಾನದಲ್ಲಿದ್ದ ಜಿಲ್ಲೆ, ಈ ಬಾರಿ 94.41% ಫಲಿತಾಂಶದೊಂದಿಗೆ ಬರೋಬ್ಬರಿ 9 ಸ್ಥಾನಗಳ ಬೃಹತ್ ಜಿಗಿತ ಕಂಡು 21ನೇ ಸ್ಥಾನಕ್ಕೆ ಏರಿದೆ. ಈ ಅಭೂತಪೂರ್ವ ಸಾಧನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ, ಮಾನ್ವಿ ತಾಲೂಕಿನ ಬಿ.ವಿ.ಆರ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಖದೇವ್ ಅವರು 625 ಕ್ಕೆ 625 ಪೂರ್ಣ ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಹಾಗೂ ಇಡೀ ರಾಜ್ಯಕ್ಕೆ ಕೀರ್ತಿ ತಂದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಸುಖದೇವ್ ಅವರ ಈ ಅಸಾಧಾರಣ ಸಾಧನೆಗೆ ಸಚಿವರು ವಿಶೇಷವಾಗಿ ಶ್ಲಾಘಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವ ಎನ್.ಎಸ್. ಬೋಸರಾಜು ಅವರು, "ರಾಯಚೂರು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ವರ್ಷದಿಂದ ವರ್ಷಕ್ಕೆ ಅತ್ಯುತ್ತಮಗೊಳ್ಳುತ್ತಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿ. 30ನೇ ಸ್ಥಾನದಿಂದ 21ನೇ ಸ್ಥಾನಕ್ಕೆ ಜಿಗಿತ ಕಂಡಿದ್ದು, ಕಲ್ಯಾಣ ಕರ್ನಾಟಕ ವಿಭಾಗದಲ್ಲಿಯೇ ಅಗ್ರಸ್ಥಾನ ಪಡೆದಿರುವುದು ಇಡೀ ಜಿಲ್ಲೆಗೆ ಹೆಮ್ಮೆಯ ವಿಷಯ. ಈ ಸಾಧನೆಗಾಗಿ ಹಗಲಿರುಳು ಶ್ರಮಿಸಿದ ಎಲ್ಲಾ ವಿದ್ಯಾರ್ಥಿಗಳು, ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದ, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮಾನ್ವಿಯ ಪ್ರತಿಭಾವಂತ ವಿದ್ಯಾರ್ಥಿ ಸುಖದೇವ್ ಅವರ ಭವ್ಯ ಭವಿಷ್ಯಕ್ಕೆ ಶುಭ ಹಾರೈಸಿದ ಅವರು ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆ ಶೈಕ್ಷಣಿಕವಾಗಿ ರಾಜ್ಯದಲ್ಲೇ ಟಾಪ್ 10ರ ಪಟ್ಟಿಯಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕೆಂದು ಸಚಿವರು ಕರೆ ನೀಡಿದ್ದಾರೆ.


Comments
Post a Comment