ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇರಲಿ- ಜಿಲ್ಲಾಧಿಕಾರಿ ಪೂವಿತಾ ಎಸ್.
ಜಯ ಧ್ವಜ ನ್ಯೂಸ್ ,ರಾಯಚೂರು ಜೂ.1- ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ತಾವು ಸಾಧನೆ ಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು.
ಅವರಿಂದು ನಗರದ ರೈಲ್ವೆ ಸ್ಟೇಷನ್ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಚೆನ್ನಾಗಿ ಓದಿ ಉನ್ನತ ಹುದ್ದೆಗಳಾದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಇತರೆ ವಿವಿಧ ಉನ್ನತ ಹುದ್ದೆಗಳ ಕನಸು ಕಾಣಬೇಕು.
ವಿದ್ಯಾರ್ಥಿಗಳು ಯಾರು ಶಾಲೆಯನ್ನು ಬಿಡದಂತೆ ನೋಡಿಕೊಳ್ಳಬೇಕು. ಶಾಲೆ ಬಿಟ್ಟಲ್ಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಶಿಕ್ಷಕರಿಂದ ಆಗಬೇಕೆಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ನೋಡಿ ನನಗೆ ಸಂತೋಷವಾಗಿದೆ. ಮಕ್ಕಳನ್ನು ನೋಡಿ, ನಮ್ಮ ಬಾಲ್ಯದ ನೆನಪು ಆಗುತ್ತದೆ. ಮಕ್ಕಳು ಒಂದು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿಯನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು. ಕಳೆದ ವರ್ಷದಂತೆ ಈ ವರ್ಷವು ವಿದ್ಯಾರ್ಥಿಗಳು ಹೆಚ್ಚಿನ ಮಟ್ಟದಲ್ಲಿ ಸಾಧ್ಯನೆ ಮಾಡಬೇಕು. ಅಲ್ಲದೆ ಶಾಲೆಯಲ್ಲಿ ಕಿಶೋರಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ. ಅಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿ, ಮಾಹಿತಿ ಪಡೆಯಬೇಕು. ಅಲ್ಲದೆ ನಿಮ್ಮ ಗೆಳೆಯರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ಪುಸ್ತಕಗಳನ್ನು ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ವಿವಿಧ ಗಣ್ಯರಿಂದ ವಿತರಣೆ ಮಾಡಲಾಯಿತು.
ಕಿಶೋರಿ ಕೇಂದ್ರ ಪರಿಶೀಲನೆ: ಬಾಲಕಿಯರಿಗೆ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸಲು ನಗರದ ರೈಲ್ವೆ ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಿಸಿರುವ ಕಿಶೋರಿ ಕೇಂದ್ರವು ಉದ್ಘಾಟನೆಗೆ ಸಿದ್ಧವಾಗಿದ್ದು, ಜಿಲ್ಲಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಣ್ಣಪುಟ್ಟ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ ಉದ್ಘಾಟನೆ ಅನುಕೂಲ ಮಾಡಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಂಟೇಪ್ಪ ಸೇರಿದಂತೆ ಶಾಲೆಯ ಮುಖ್ಯಗುರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು


Comments
Post a Comment