ಅಶ್ವಿನಿ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂ

ಜಯ ಧ್ವಜ ನ್ಯೂಸ್, ರಾಯಚೂರು,ಆ.25- ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಅಶ್ವಿನಿ ಅವರ ಕುಟುಂಬಕ್ಕೆ ಸೂಕ್ತ ನ್ಯಾಯ ಹಾಗೂ ಅಗತ್ಯ ನೆರವು ಒದಗಿಸುವಂತೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಹಾಗೂ ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ನಿಯೋಗವು ಅಶ್ವಿನಿ ಹತ್ಯೆ ಪ್ರಕರಣದ ಕುರಿತು ಸಮಗ್ರವಾಗಿ ಚರ್ಚಿಸಿ, ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿತು.


ಕುಟುಂಬದ ಅಸಹನೀಯ ನೋವಿನ ಸಂದರ್ಭದಲ್ಲಿ ಸರ್ಕಾರವು ಅಗತ್ಯ ನೆರವು ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಅಜಯ್ ಸಿಂಗ್ ಅವರು ಪ್ರಕರಣದ ಹಿನ್ನೆಲೆ, ತನಿಖೆಯ ಪ್ರಗತಿ ಹಾಗೂ ಸಂತ್ರಸ್ತ ಕುಟುಂಬದ ಪ್ರಸ್ತುತ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಿದರು. ಕುಟುಂಬಕ್ಕೆ ತಕ್ಷಣದ ಆರ್ಥಿಕ ನೆರವು, ಭದ್ರತೆ ಹಾಗೂ ಅಗತ್ಯವಿರುವ ಇತರ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವಂತೆ ಅವರು ಮನವಿ ಮಾಡಿದರು. ಅಲ್ಲದೆ, ಪ್ರಕರಣದ ತನಿಖೆಯಲ್ಲಿ ಯಾವುದೇ ಲೋಪವಾಗದಂತೆ ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಸರ್ಕಾರದಿಂದ ತ್ವರಿತ ಕ್ರಮ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ಕುಮಾರ್ ನಾಯಕ್, ಶಾಸಕರಾದ ಹಂಪಯ್ಯ ನಾಯಕ, ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಎ. ವಸಂತ್ ಕುಮಾರ್ ,  ಬಸನಗೌಡ ಬಾದರ್ಲಿ, ಅಂಬಣ್ಣ ಅರೋಲಿ, ಮಲ್ಲೆಶ ಕೊಲಮಿ, ಈರಣ್ಣ, ಸೇರಿದಂತೆ ರಾಯಚೂರು ಜಿಲ್ಲಾ ಛಲವಾದಿ ಸಂಘಟನೆಯ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Comments

Popular posts from this blog